ಕರ್ನಾಟಕದ ಒಟ್ಟು ೧೧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದ್ದು, ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಕರ್ನಾಟಕದಲ್ಲಿ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಈಗ್ ಮತ್ತೆ ಜೋರಾಗುವ ಸಾಧ್ಯತೆ ಇದೆ. ಶುಕ್ರವಾರದಂದು ಕರ್ನಾಟಕದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಅದರಲ್ಲೂ ಕರಾವಳಿಯ ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆಯಿದ್ದು, ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಕೊಡಗು, ಬೆಳಗಾವಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ ಘೋಷಿಸಿದೆ.
ಕರಾವಳಿಯ ಉಡುಪಿ ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದ್ದು, ಶುಕ್ರವಾರ ಅಲ್ಲಲ್ಲಿ ಭಾರೀ ಮಳೆಯಿಂದ ಅತೀ ಹೆಚ್ಚು ಮಳೆಯಾಗುವ ಮುನ್ಸೂಚನೆಯಿದೆ. ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಕರಾವಳಿ ಭಾಗದಲ್ಲಿ ಮಳೆಯೊಂದಿಗೆ ಗಾಳಿಯ ಪ್ರಮಾಣ ಅಧಿಕವಾಗಿರುವುದರಿಂದ ಜನ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

