ಉಡುಪಿ : ನಗರದ ಆದಿಉಡುಪಿ ಎಪಿಎಂಸಿ ಮಾರುಕಟ್ಟೆಯಲ್ಲಿ ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉಡುಪಿ ನಗರಸಭಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ರಾಸಾಯನಿಕ ಮಿಶ್ರಿತ ಚೀನಾ ಬೆಳ್ಳುಳ್ಳಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನಂತೆ ಉಡುಪಿ ನಗರಸಭಾ ಪೌರಾಯುಕ್ತ ರಾಯಪ್ಪ ನೇತೃತ್ವದ ತಂಡ ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆಗೆ ಆಗಮಿಸಿ ಪರಿಶೀಲನೆ ನಡೆಸಿತು.
ಈ ಸಂದರ್ಭದಲ್ಲಿ ಎಪಿಎಂಸಿ ಅಧಿಕಾರಿಗಳು ಕೂಡ ಹಾಜರಿದ್ದರು. ಬಳಿಕ ವ್ಯಾಪಾರಸ್ಥರಿಂದ ಮಾಹಿತಿ ಪಡೆದು, ಮಾರಾಟಕ್ಕೆ ತಂದಿದ್ದ ರಾಸಾಯನಿಕ ಮಿಶ್ರಿತ ಚೀನಾ ಬೆಳ್ಳುಳ್ಳಿ ಎಂಬ ಶಂಕೆಯ ಮೇರೆಗೆ ಸುಮಾರು 12 ಟನ್ ಬೆಳ್ಳುಳ್ಳಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು.

