ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ ವತಿಯಿಂದ ಉಡುಪಿ ಜಿಲ್ಲೆಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1,500 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರೂ. 25 ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ, 2025ನೇ ಸಾಲಿನ ಡೈರಿ ಬಿಡುಗಡೆ ಹಾಗೂ ವಿಧಾನಪರಿಷತ್ ನೂತನ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹಾಗೂ ಈ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಖಂಬದಕೋಣೆ ರೈತರ ಸೇವಾ ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕೆ. ನಾರಾಯಣ ಬಲ್ಲಾಳ್, ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕರಾದ ಉದಯ ಹಟ್ಟಿಯಂಗಡಿ ರವರಿಗೆ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ವಹಿಸಿದ್ದರು.

ಸಮಾರಂಭವನ್ನು ಅಜೆಕಾರು ಪದ್ಮ ಗೋಪಾಲ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ| ಸುಧಾಕರ ಶೆಟ್ಟಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರವನ್ನು ಗೀತಾನಂದ ಫೌಂಡೇಶನ್ ಕೋಟ ಪ್ರವರ್ತಕರಾದ ಆನಂದ ಸಿ. ಕುಂದರ್ ವಿತರಿಸಿದರು. ಬ್ಯಾಂಕಿನ 2025ನೇ ಸಾಲಿನ ಡೈರಿಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ನಿರ್ದೇಶಕರಾದ ಶ್ಯಾಮಿಲಿ ನವೀನ್ ಬಿಡುಗಡೆ ಮಾಡಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಕೆ. ಸುವರ್ಣ, ಉದ್ಯಮಿ ಆನಂದ ಪಿ. ಸುವರ್ಣ, ಉಜ್ವಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಅಜಯ್ ಪಿ. ಶೆಟ್ಟಿ, ಉದ್ಯಮಿ ಹರಿಯಪ್ಪ ಕೋಟ್ಯಾನ್, ರಾಮಚಂದ್ರ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.



ಸಹಕಾರಿ ಕ್ಷೇತ್ರದ ಸಂಸ್ಥೆಗಳು ಆರ್ಥಿಕವಾಗಿ ಸಧೃಡವಾಗಿ ಬೆಳೆದರೆ ಸಮಾಜಕ್ಕೆ ಅಸ್ತಿಯಾಗಲಿದೆ ಎಂಬುದಕ್ಕೆ
ಕರಾವಳಿ ಭಾಗದ ಪ್ರತಿಷ್ಟಿತ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಹಾಲಕ್ಷ್ಮೀ ಬ್ಯಾಂಕ್ ಗ್ರಾಹಕರ, ಸದಸ್ಯರ ಸಹಕಾರದಿಂದ ನಿರಂತರ ಪ್ರಗತಿ ಸಾಧಿಸುತ್ತಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದೇ ಸಾಕ್ಷಿಯಾಗಿದೆ.
ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಂಸ್ಥೆಯ ಮೂಲಕ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯಶಸ್ಸನ್ನು ಸಾಧಿಸಿ ಮುಂದಿನ ದಿನಗಳಲ್ಲಿ ಇತರ ವಿದ್ಯಾರ್ಥಿಗಳಿಗೆ ಸಹಕಾರ ನೀಡುವಂತಾಗಲಿ ಎಂಬುದೇ ಬ್ಯಾಂಕಿನ ಆಶಯ.
ಯಶ್ ಪಾಲ್ ಸುವರ್ಣ
ಅಧ್ಯಕ್ಷರು, ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಲಿ. ಉಡುಪಿ

