ಉಡುಪಿ : ಕೇಂದ್ರ ಸಚಿವರಾದ ಜೆಪಿ ನಡ್ಡಾ ಅವರನ್ನು ಭೇಟಿಯಾದ ಉಡುಪಿ ಚಿಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರು ಉಡುಪಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಉಡುಪಿ ಜಿಲ್ಲೆಯು ಸುಮಾರು 167 ಗ್ರಾಮ ಪಂಚಾಯಿತಿಗಳನ್ನು ಮತ್ತು 15 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಪ್ರದೇಶವಾಗಿದೆ. ಶಿಕ್ಷಣ ಕ್ಷೇತ್ರ, ದೇವರ ಬೀಡು, ಪ್ರವಾಸಿ ತಾಣವನ್ನು ಹೊಂದಿರುವ ಜಿಲ್ಲೆಗೆ ಒಂದು ಸುಸಜ್ಜಿತವಾದ ಮೆಡಿಕಲ್ ಕಾಲೇಜಿನ ಅವಶ್ಯಕತೆ ಇದೆ. ಆರೋಗ್ಯ ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಉದ್ದೇಶದಿಂದ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯವಿದೆ ಎಂದು ಹೇಳಿದರು.
ಉಡುಪಿ ಜನತೆಯ ಆರೋಗ್ಯದ ಸೇವೆಗಾಗಿ ಉಡುಪಿ ಜಿಲ್ಲೆಗೊಂದು ಸುಸಜ್ಜಿತವಾದ ಸರಕಾರಿ ವೈದ್ಯಕೀಯ ಕಾಲೇಜು ಮಂಜೂರು ಆಗಬೇಕು ಎಂದು ವಿನಂತಿ ಮಾಡಿದರು. ಇದಕ್ಕೆ ಸ್ಪಂದಿಸಿರುವ ಕೇಂದ್ರ ಸಚಿವರು ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜ್ ಮಂಜೂರು ಮಾಡುವುದರ ಕುರಿತು ಪರಿಶೀಲನೆ ಮಾಡುವುದಾಗಿ ತಿಳಿಸಿದ್ದಾರೆ.

