ಸುರತ್ಕಲ್: ಮುಲ್ಕಿಯ ಕಂದಾಯ ನಿರೀಕ್ಷಕರೊಬ್ಬರು ಲಂಚ ಸ್ವೀಕರಿಸುವಾಗ ಸುರತ್ಕಲ್ ಜಂಕ್ಷನ್ ಬಳಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಡಿ.19ರ ಗುರುವಾರ ನಡೆದಿದೆ.
ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಆಸ್ತಿಗೆ ಸಂಬಂಧಿಸಿದ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡಲು 4 ಲಕ್ಷ ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಚ್ಛೆ ಇಲ್ಲದ ಕಾರಣ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಡಿ. 19ರ ಗುರುವಾರ ಬೆಳಿಗ್ಗೆ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅಧಿಕಾರಿಯನ್ನು ಪಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿದೆ.
ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಎಂ.ಎ ನಟರಾಜ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಡಾ॥ ಗಾನ ಪಿ. ಕುಮಾರ್, ಪೊಲೀಸ್ ನಿರೀಕ್ಷಕ ಅಮಾನುಲ್ಲಾ.ಎ., ಸುರೇಶ್ ಕುಮಾರ್ ಪಿ., ಚಂದ್ರಶೇಖರ್ ಕೆ.ಎನ್. ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

