ಉಡುಪಿ: ಅಪಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಸಂದೀಪ್ ಪೂಜಾರಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.
ಕಾಪುವಿನ ಶಿರ್ವ ನಿವಾಸಿ ಸಂದೀಪ್ ಪೂಜಾರಿ ಅವರು ಮಾಧ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪಬ್ಲಿಕ್ ಟಿವಿ, ಸ್ಪಂದನ ಸುದ್ದಿ ವಾಹಿನಿಯಲ್ಲಿ ಕ್ಯಾಮೆರಾಮನ್, ಬಿ ಟಿವಿಯ ಕ್ಯಾಮೆರಾಮನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಸ್ತುತ ಈಟಿವಿ ಭಾರತ್ ನಲ್ಲೂ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಮಾಧ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ರೀತಿಯಲ್ಲಿ ಛಾಪನ್ನು ಮೂಡಿಸಿದ್ದಾರೆ.
ಇವರಿಗೆ ಸಕಲೇಶಪುರದಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಉಡುಪಿಯ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ರಸ್ತೆ ದುರಂತದಲ್ಲಿ ಬೆನ್ನುಹುರಿಗೆ ತೀವ್ರ ಪೆಟ್ಟಾಗಿ ಗಂಭೀರ ಸ್ಥಿತಿಯಲ್ಲಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

