ಆಗುಂಬೆ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಾರೀ ವಾಹನ ಸಂಚಾರವನ್ನು ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸುವಂತೆ ಉಡುಪಿ ಜಿಲ್ಲಾಧಿಕಾರಿ ಈಗಾಗಲೇ ಆದೇಶ ಹೊರಡಿಸಿದ್ದಾರೆ.
ಇಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ- ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ಜೂನ್ 15 ರಿಂದ 30ರವರೆಗೆ ಈ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿದ್ದಾರೆ.
ಉಡುಪಿ-ತೀರ್ಥಹಳ್ಳಿಗೆ ಸಂಚರಿಸುವಂತಹ ಭಾರಿ ವಾಹನಗಳು ಉಡುಪಿ-ಕುಂದಾಪುರ ಸಿದ್ಧಾಪುರ ಮಾಸ್ತಿಕಟ್ಟೆ-ತೀರ್ಥಹಳ್ಳಿಗೆ ತೆರಳುವಂತೆ ಸೂಚಿಸಲಾಗಿದೆ.
ಉಡುಪಿ-ತೀರ್ಥಹಳ್ಳಿಗೆ ಉಡುಪಿ-ಕಾರ್ಕಳ-ಮಾಳ ಘಾಟಿ-ಶೃಂಗೇರಿ-ತೀರ್ಥಹಳ್ಳಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ತಿಳಿಸಲಾಗಿದೆ.

