ಕಾಪು: ಕರ್ನಾಟಕ ಸರಕಾರದ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿಯವರು ಭಾನುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.
ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.
ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಸರಕಾರದ ಅನುದಾನವಿಲ್ಲದೆ ದಾನಿಗಳ ಮತ್ತು ಭಕ್ತರ ನೆರವಿನಿಂದ ಇಷ್ಟು ದೊಡ್ಡ ದೇವಸ್ಥಾನ ನಿರ್ಮಾಣ ಮಾಡಿರುವುದು ಬಹಳ ಸಂತೋಷ. ಇಲ್ಲಿನ ವಾಸ್ತುಶಿಲ್ಪ ಬಹಳಷ್ಟು ಚೆನ್ನಾಗಿ ಮೂಡಿಬಂದಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ದೇವಳದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಮಾಜಿ ಸಚಿವ ಮತ್ತು ಗೌರವಾಧ್ಯಕ್ಷ ವಿನಯ ಕುಮಾರ್ ಸೊರಕೆ, ಮಾಜಿ ಸಚಿವ ಅಭಯ ಚಂದ್ರ ಜೈನ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕಳ, ಉಡುಪಿ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಮಂಜುಳಾ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಅಧ್ಯಕ್ಷ ಭಾಸ್ಕರ ದೇವಾಡಿಗ, ಕಾಪು ತಾಲೂಕು ತಹಶಿಲ್ದಾರ್ ಪ್ರತಿಭಾ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಮತ್ತಿತರರು ಉಪಸ್ಥಿತರಿದ್ದರು.


