ಕಾರ್ಕಳ: ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿ ಐವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೆಳ್ಮಣ್ ಪೆರಲ್ ಪಾದೆ ಬಳಿಯ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ.

ನಿಟ್ಟೆಯ ವಿದ್ಯಾಸಂಸ್ಥೆಯ ನಾಲ್ವರು ವಿದ್ಯಾರ್ಥಿಗಳು ತರಗತಿಯನ್ನು ಮುಗಿಸಿ ಮಂಗಳೂರಿನ ಕಡೆಯತ್ತ ಕಾರಿನಲ್ಲಿ ವೇಗವಾಗಿ ಸಂಚರಿಸುತ್ತಿರುವ ವೇಳೆಯಲ್ಲಿ ಬೆಳ್ಮಣ್ ಸಮೀಪದ ಪೆರಲ್ ಪಾದೆ ಬಳಿಯ ತಿರುವು ರಸ್ತೆಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದು ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಪಾದಚಾರಿ ಸಾಂತೂರು ನೀಚಾಲು ನಿವಾಸಿ ಸುರೇಶ್ ಸಾಮಗಾರ ಎಂಬವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದು ಈ ಪೈಕಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ.
ಘಟನೆ ನಡೆದ ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
