ಬೆಂಗಳೂರು: ಯುವ ಜನತೆಯನ್ನು ಹೆಚ್ಐವಿ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಕಾಲೇಜು ವಿದ್ಯಾರ್ಥಿಗಳಿಗೆ ಎಚ್ಐವಿ ಸೋಂಕು ಪರೀಕ್ಷೆ ನಡೆಸಲು ನಿರ್ಧರಿಸಿದೆ.
ಎಚ್ಐವಿ ಸೋಂಕನ್ನು ಆರಂಭದಲ್ಲೇ ಪತ್ತೆ ಮಾಡಿ, ಅದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಎಚ್ಐವಿ ಸೋಂಕಿತಕ ಸಂಖ್ಯೆಯಲ್ಲಿ ಮೂರನೇ ಸ್ಥಾನದಲ್ಲಿದೆ ಎಂದು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಮತ್ತು ಇತರ ಸಂಸ್ಥೆಗಳು ವರದಿ ನೀಡಿವೆ.
ರಾಜ್ಯದಲ್ಲಿ ಸುಮಾರು 2.60 ಲಕ್ಷ ಮಂದಿ ಹೆಚ್ಐವಿ ಸೋಂಕಿನಿಂದ ಬಳಲುತ್ತಿದ್ದಾರೆ. ಅವರಲ್ಲಿ ಸುಮಾರು 2.05 ಲಕ್ಷ ಮಂದಿ ಆಂಟಿ ರೆಟ್ರೋ ವೈರಲ್ ಥೆರಪಿ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಇದೆ.
ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ವಿಶೇಷವಾಗಿ 18 ರಿಂದ 35 ವರ್ಷದ ಯುವ ಸಮೂಹದಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ. ರಾಜ್ಯದಲ್ಲಿ18 ರಿಂದ 25 ವರ್ಷದ ಸುಮಾರು 7 ಸಾವಿರ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದೆಲ್ಲದಕ್ಕಿಂತ ಮುಖ್ಯವಾಗಿ ರಾಜ್ಯದಲ್ಲಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ಇರುವುದೇ ತಿಳಿದಿಲ್ಲ ಎಂದು ಮಾಹಿತಿ ನೀಡಿದೆ.

