ಉಡುಪಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,395 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹಾಗೂ 196 ಸ್ಥಳೀಯ ವೃಂದದ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯು ದಿನಾಂಕ 02.08.2026 ರಂದು ನಡೆಯಲಿದೆ. ಉಡುಪಿ ಜಿಲ್ಲೆಯ ಒಟ್ಟು 6 ಕೇಂದ್ರಗಳಲ್ಲಿ ಈ ಪರೀಕ್ಷೆ ನಿಗದಿಯಾಗಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ, ಸುಸೂತ್ರವಾಗಿ ಮತ್ತು ಅಕ್ರಮ ಮುಕ್ತವಾಗಿ ನಡೆಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿಯಲ್ಲಿ ಪರೀಕ್ಷಾ ದಿನದಂದು ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ.
ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಯನ್ನು ಹೊರತುಪಡಿಸಿ, ಇತರೆ ಅನಧಿಕೃತ ವ್ಯಕ್ತಿಗಳ ಪ್ರವೇಶ ಹಾಗೂ ಗುಂಪುಗೂಡುವುದನ್ನು ನಿರ್ಬಂಧಿಸಲಾಗಿದೆ. ಅಲ್ಲದೆ, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಕಲು ತಡೆಯಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜಿರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಹಾಗೂ ಬುಕ್ ಸ್ಟಾಲ್ಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ನಿರ್ದೇಶಿಸಲಾಗಿದೆ.

