ಬ್ರಹ್ಮಾವರ, ಆ.1: ಹಂದಾಡಿ ಗ್ರಾಮದ ಗುಡ್ಡಿ ಬಾರ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿ, ನಗದು ಸೇರಿದಂತೆ ಜುಗಾರಿ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಮಣೂರು ಗ್ರಾಮದ ಕುಶಾಲ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಮಟ್ಕಾ ಜುಗಾರಿ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರ ಪೊಲೀಸ್ ಠಾಣೆಯ ಪಿಎಸ್ಐ ಮುಕ್ತಾಬಾಯಿ ಅವರು ಠಾಣಾ ಸಿಬ್ಬಂದಿ ಹಾಗೂ ಪಂಚರೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು.
ಬಳಿಕ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಟ್ಕಾ ಜುಗಾರಿ ನಡೆಸಿರುವುದನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಆರೋಪಿಯಿಂದ ಒಂದು ಮಟ್ಕಾ ಚೀಟಿ, ಒಂದು ಬಾಲ್ಪೆನ್ ಹಾಗೂ ₹2,395 ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 141/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 112 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ (KP Act) ಕಲಂ 78(i)(iii) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

