ಕೊಲ್ಲೂರು: ಬೆಳ್ಳಾಲ ಗ್ರಾಮ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರು-ಪ್ರತಿದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೊದಲ ಪ್ರಕರಣದಲ್ಲಿ, ನೊಂದ ಮಹಿಳೆಯೊಬ್ಬರು ನೀಡಿದ ದೂರಿನನ್ವಯ ಸನತ್ ಕುಂದಾಪುರ ಎಂಬಾತ ಮನೆ ಬಳಿ ಬಂದು ಆಕೆಯ ಮಾನಕ್ಕೆ ಕುಂದುಂಟಾಗುವಂತೆ ವರ್ತಿಸಿ, ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ನೊಂದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ (ಅಪರಾಧ ಕ್ರಮಾಂಕ: 51/2026) ದಾಖಲಾಗಿದ್ದು, ಆರೋಪಿ ಸನತ್ನನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನೊಂದೆಡೆ, ಈ ಘಟನೆ ನಡೆದ ಸಂದರ್ಭದಲ್ಲಿ ಮಹಿಳೆಯ ಕುಟುಂಬಸ್ಥರು ತನ್ನನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ಯುವಕ (ಸನತ್) ಪ್ರತಿದೂರು ನೀಡಿದ್ದಾನೆ. ಈ ದೂರಿನನ್ವಯ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಸೇರಿದಂತೆ ವಿವಿಧ ಕಾಯ್ದೆಯಡಿ ಪ್ರಕರಣ (ಅಪರಾಧ ಕ್ರಮಾಂಕ: 52/2026) ದಾಖಲಿಸಿಕೊಳ್ಳಲಾಗಿದ್ದು, ಹಲ್ಲೆ ನಡೆಸಿದ ಆರೋಪದ ಮೇರೆಗೆ ಇಬ್ಬರನ್ನು ಬಂಧಿಸಲಾಗಿದೆ.

ಪ್ರಸ್ತುತ ಎರಡೂ ಪ್ರಕರಣಗಳ ತನಿಖೆ ಪ್ರಗತಿಯಲ್ಲಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಇನ್ನುಳಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

