ಉಡುಪಿ ತಾಲೂಕಿನ ಕೆಳಪರ್ಕಳದಲ್ಲಿ ಮತ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕೆಳಪರ್ಕಳದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬಳಿಯ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಮಧ್ಯರಾತ್ರಿ ಊಟ ಮುಗಿಸಿ ಗೆಳೆಯರೊಂದಿಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಬೈಕ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸನತ್ ಎಂದು ಗುರುತಿಸಲಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೆಳಪರ್ಕಳದ ಈ ಭಾಗದಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ, ರಸ್ತೆ ಸುರಕ್ಷತೆ ಹಾಗೂ ತಿರುವುಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

