ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ.
2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ನೇಮಕಾತಿಗೆ ಸಂಬಂಧಿಸಿದಂತೆ ಗರಿಷ್ಠ ವಯೋಮಿತಿಯನ್ನು ಐದು ವರ್ಷಗಳ ಕಾಲ ಸಡಿಲಿಕೆ ಮಾಡಿ ಆಯೋಗ ಅಧಿಕೃತ ಆದೇಶ ಹೊರಡಿಸಿದೆ.
ಒಟ್ಟು 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಆಯೋಗವು ಜುಲೈ 31ರಂದು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಅಧಿಸೂಚನೆ ಪ್ರಕಟಿಸಿತ್ತು. ಇದರಲ್ಲಿ ಕಲ್ಯಾಣ ಕರ್ನಾಟಕ (ಹೈದರಾಬಾದ್-ಕರ್ನಾಟಕ) ಭಾಗದ 22 ಹಾಗೂ ಉಳಿಕೆ ಮೂಲ ವೃಂದದ 297 ಹುದ್ದೆಗಳು ಸೇರಿವೆ. ಸರ್ಕಾರದ ಹಿಂದಿನ ಆದೇಶದನ್ವಯ ಇದೀಗ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅನ್ವಯವಾಗುವಂತೆ ಗರಿಷ್ಠ ವಯಸ್ಸಿನ ಮಿತಿಯನ್ನು 5 ವರ್ಷ ಹೆಚ್ಚಿಸಿ ಕೆಪಿಎಸ್ಸಿ ಕಾರ್ಯದರ್ಶಿಗಳು ಪರಿಷ್ಕೃತ ಪಟ್ಟಿ ಬಿಡುಗಡೆ ಮಾಡಿರುವುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ (General Merit) ಅಭ್ಯರ್ಥಿಗಳಿಗೆ ಈ ಮೊದಲು ಗರಿಷ್ಠ 35 ವರ್ಷ ನಿಗದಿಪಡಿಸಲಾಗಿತ್ತು, ಇದೀಗ ಅದನ್ನು 40 ವರ್ಷಕ್ಕೆ ಏರಿಸಲಾಗಿದೆ. ಅದೇ ರೀತಿ ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ ಹಾಗೂ 3ಬಿ ಪ್ರವರ್ಗದ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 38 ರಿಂದ 43 ವರ್ಷಕ್ಕೆ ವಿಸ್ತರಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 40 ರಿಂದ 45 ವರ್ಷಗಳಿಗೆ ಹೆಚ್ಚಿಸಲಾಗಿದೆ.

