ಉಡುಪಿ: ಕಾಪು ತಾಲೂಕಿನ ಮುದರಂಗಡಿ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣದ ತನಿಖೆಯನ್ನು ಶಿರ್ವ ಪೊಲೀಸರು ಮುಂದುವರಿಸಿದ್ದಾರೆ.
ಪ್ರಕರಣದಲ್ಲಿ ಈಗಾಗಲೇ ನೇರವಾಗಿ ಭಾಗಿಯಾಗಿದ್ದ ಅನ್ಮೋಲ್ ರಸ್ತೋಗಿ ಹಾಗೂ ಜಿಯಾಹುಲ್ ವಾಜುಲ್ ಶೇಖ್ ಅಲಿಯಾಸ್ ದೀಪಕ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಆರೋಪಿಗಳ ಬ್ಯಾಂಕ್ ಖಾತೆ ಪರಿಶೀಲನೆ ವೇಳೆ ಮೊಹಮ್ಮದ್ ಇರ್ಷಾದ್ ಹಾಗೂ ಚಿರಾಗ್ ಪೂಜಾರಿ ಹಣ ಜಮಾ ಮಾಡಿ ಕೃತ್ಯಕ್ಕೆ ಸಹಕರಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಅವರನ್ನೂ ಬಂಧಿಸಲಾಗಿದೆ.
ಮುಂದಿನ ತನಿಖೆಯಲ್ಲಿ ಬ್ಯಾಂಕ್ ಖಾತೆಗಳು, ಮೊಬೈಲ್ ಹಾಗೂ ಕರೆ ವಿವರಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕೊಲೆಗೆ ಅಪರಾಧಿಕ ಒಳಸಂಚು ರೂಪಿಸಿ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಸದಾನಂದ ದೇವಾಡಿಗ ಹಾಗೂ ಕಿಶೋರ್ ರಾಮ ಪೂಜಾರಿ ಅವರನ್ನು ಬಂಧಿಸಲಾಗಿದೆ.
ಸದಾನಂದ ದೇವಾಡಿಗನಿಂದ ಎರಡು ಮೊಬೈಲ್ ಫೋನ್, ಒಂದು ಮೋಟಾರ್ ಸೈಕಲ್ ಹಾಗೂ ನಗದು, ಕಿಶೋರ್ ರಾಮ ಪೂಜಾರಿಯಿಂದ ಮೂರು ಮೊಬೈಲ್ ಫೋನ್ ಹಾಗೂ ಒಂದು ಕ್ರೇಟಾ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇನ್ನು ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ ಆರೋಪಿ ರಾಜು ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರ್ಕಾರಿ ನೌಕರರ ಮೇಲೆ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಗಾಯಗೊಂಡು ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಆತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

