ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಕಲ್ಯಾಣ ಹಾಗೂ ಶಿಕ್ಷಣ ವ್ಯವಸ್ಥೆಯ ಸಮಗ್ರ ಸುಧಾರಣೆಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಜ್ಯದ ಬಹುತೇಕ ಶಾಲೆಗಳಿಗೆ ಈಗಾಗಲೇ ಪಠ್ಯಪುಸ್ತಕಗಳ ಪೂರೈಕೆ ಸಂಪೂರ್ಣ ಪೂರ್ಣಗೊಂಡಿದೆ. ಪ್ರವೇಶಾತಿ ವ್ಯತ್ಯಾಸವಿರುವ ಕಡೆಗಳಲ್ಲಿ ತಕ್ಷಣವೇ ಅಗತ್ಯ ಪಠ್ಯಪುಸ್ತಕ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಬಾರಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ ವಿತರಣೆ ಪ್ರಕ್ರಿಯೆ ಯಶಸ್ವಿಯಾಗಿ ಆರಂಭಗೊಂಡಿದೆ ಎಂದು ಹೇಳಿದ್ದಾರೆ.
ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುವ ಶೂ ಮತ್ತು ಸಾಕ್ಸ್ ಪೂರೈಕೆಯಲ್ಲಿ ಗುಣಮಟ್ಟ ಕಾಪಾಡಲು ಸರ್ಕಾರ ಹೊಸ ನಿರ್ಧಾರ ಪ್ರಕಟಿಸಿದೆ. ಸ್ಥಳೀಯ ಮಟ್ಟದಲ್ಲಿ ಕಳಪೆ ದರ್ಜೆಯ ಶೂಗಳನ್ನು ನೀಡಲಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ, ಸಚಿವ ಸಂಪುಟದ ಒಪ್ಪಿಗೆ ಪಡೆದು ರಾಜ್ಯಮಟ್ಟದಲ್ಲೇ ಏಕರೂಪದ ಟೆಂಡರ್ ಕರೆಯಲಾಗಿದೆ. ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಅಳತೆಯಲ್ಲಿ ವ್ಯತ್ಯಾಸಗಳಿದ್ದರೆ ತಕ್ಷಣವೇ ಅವುಗಳನ್ನು ಬದಲಾಯಿಸಿಕೊಡಬೇಕು ಎಂದು ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

