ಮಂಗಳೂರು: ಕಳೆದ ಒಂದೂವರೆ ವರ್ಷಗಳಿಂದ ಮಂಗಳೂರು ಜಿಲ್ಲಾ ಕಾರಾಗೃಹದ ಜಾಮರ್ನಿಂದಾಗಿ ಸಾರ್ವಜನಿಕರು ನೆಟ್ವರ್ಕ್ ಸಮಸ್ಯೆಯಿಂದ ಬಳಲುತ್ತಿದ್ದು, ಕೂಡಲೇ ಕಾಲ ಮಿತಿ ನಿಗದಿ ಮಾಡಿ ಸಮಸ್ಯೆ ಬಗೆಹರಿಸುವಂತೆ ರಾಜ್ಯ ಸರ್ಕಾರವನ್ನು ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದ್ದಾರೆ.
ಈ ಸಂಬಂಧ ಕಳೆದ ಒಂದೂವರೆ ವರ್ಷಗಳಿಂದಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಅಂದಿನ ಜಿಲ್ಲಾ ಉಸ್ತುವಾರಿ ಸಚಿವರು, ಗೃಹ ಸಚಿವರಿಗೂ ಮನವಿ ಸಲ್ಲಿಸಲಾಗಿದೆ. ಅಧಿವೇಶನದಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗಿದೆ. ಜಿಲ್ಲಾ ನ್ಯಾಯಾಲಯದ ವಕೀಲರು ಸಹ ಈ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಈ ಬಗ್ಗೆ ನಿರ್ಲಕ್ಷ್ಯ ತೋರಿದೆ ಎಂದು ಅವರು ತಿಳಿಸಿದ್ದಾರೆ.
ಜಾಮರ್ ಸಮಸ್ಯೆ ಪರಿಹರಿಸಲು ಏನು ಕ್ರಮ ಕೈಗೊಂಡಿದ್ದೀರಿ ಎಂದು ಸರ್ಕಾರವನ್ನು ಪ್ರಶ್ನೆ ಮಾಡಿದಾಗೆಲ್ಲಾ, ಸಭೆ ನಡೆಸಲಾಗಿದೆ, ಕ್ರಮ ಕೈಗೊಳ್ಳುತ್ತೇವೆ ಎನ್ನುವ ಉತ್ತರ ಲಭಿಸುತ್ತಿದೆ ಎಂದು ಆಗ್ರಹಿಸಿದ್ದಾರೆ.

