ಉಡುಪಿ: ಬೆದರಿಕೆ ಹಾಕಿ ₹5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಲೈ 2ರಂದು ಅಪರಿಚಿತ ವ್ಯಕ್ತಿಯೊಬ್ಬರು ದೂರುದಾರರಿಗೆ ಕರೆ ಮಾಡಿ, ಅವರ ಮಗನ ವಿಚಾರ ಪ್ರಸ್ತಾಪಿಸಿ ₹5 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಬಳಿಕ ಮತ್ತೊಬ್ಬ ವ್ಯಕ್ತಿಯೂ ಕರೆ ಮಾಡಿ ಹಣ ನೀಡದಿದ್ದರೆ ಜೀವಕ್ಕೆ ಅಪಾಯ ಉಂಟು ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ತನಿಖೆ ನಡೆಸಲಾಯಿತು.
ತನಿಖೆ ನಡೆಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಶೇಕ್ ಶುಕೂರ್ ಹಾಗೂ ಜೈಯಾ ಅಹಮದ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
ಪ್ರಕರಣದ ಇನ್ನೋರ್ವ ಆರೋಪಿ ಪತ್ತೆಗಾಗಿ ತನಿಖೆ ಮುಂದುವರಿದಿದೆ.
ಉಡುಪಿ ನಗರ ಠಾಣೆಯ ಇನ್ಸ್ಪೆಕ್ಟರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಪೊಲೀಸ್ ಸಿಬ್ಬಂದಿ ತನಿಖೆಯಲ್ಲಿ ಸಹಕರಿಸಿದ್ದಾರೆ.

