ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಖಾಸಗಿ ತರಬೇತಿ ವಿಮಾನ ಪತನ ದುರಂತದಲ್ಲಿ ಉಡುಪಿ ಜಿಲ್ಲೆ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತಪಟ್ಟಿದ್ದಾರೆ. ಆಗಸ್ಟ್ 27ರಂದು ಈ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳೀಯವಾಗಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸಂತಾಪ ವ್ಯಕ್ತವಾಗಿದೆ.
ಮೃತ ಅಭಿಷೇಕ್ ಪೂಜಾರಿ ಅವರು ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದವರಾಗಿದ್ದಾರೆ. ಇವರು ಗತಿಸಿದ ಎರಡೂವರೆ ವರ್ಷಗಳಿಂದ ಕಾನ್ಪುರದಲ್ಲಿ ಖಾಸಗಿ ಸಂಸ್ಥೆಯೊಂದರಲ್ಲಿ ಪೈಲಟ್ ತರಬೇತಿ ಪಡೆಯುತ್ತಿದ್ದರು.
ಅಭಿಷೇಕ್ ಅವರ ತಂದೆ ಪ್ರಭಾಕರ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಪ್ರಸ್ತುತ ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರು ಆಗಾಗ್ಗೆ ತಮ್ಮ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಕಣಜಾರಿನಲ್ಲಿರುವ ಮನೆಗೆ ಭೇಟಿ ನೀಡುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವಿಮಾನ ಪತನದ ಸುದ್ದಿ ತಿಳಿಯುತ್ತಿದ್ದಂತೆಯೇ ತೀವ್ರ ಆಘಾತಕ್ಕೊಳಗಾದ ಕುಟುಂಬಸ್ಥರು ಮುಂದಿನ ಪ್ರಕ್ರಿಯೆಗಳಿಗಾಗಿ ಕಾನ್ಪುರಕ್ಕೆ ತೆರಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾನೂನು ಮತ್ತು ತಾಂತ್ರಿಕ ತನಿಖಾ ಪ್ರಕ್ರಿಯೆಗಳು ಪ್ರಗತಿಯಲ್ಲಿವೆ.

