ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಪಡೆಯುತ್ತಿರುವ ಆದ್ಯತಾ (BPL) ಹಾಗೂ ಅಂತೋದಯ (AAY) ಪಡಿತರ ಚೀಟಿಯಲ್ಲಿರುವ ಎಲ್ಲಾ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ (e-KYC) ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು 2026ರ ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದೆ. ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಮುಂದಿನ ದಿನಗಳಲ್ಲಿ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿರುವುದರಿಂದ, ಫಲಾನುಭವಿಗಳು ಕೂಡಲೇ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಕೋರಲಾಗಿದೆ.
ಅರ್ಹ ಫಲಾನುಭವಿಗಳಿಗೆ ಪಡಿತರ ವ್ಯವಸ್ಥೆ ಸುಸೂತ್ರವಾಗಿ ತಲುಪಿಸುವ ಉದ್ದೇಶದಿಂದ, ಇ-ಕೆವೈಸಿ ಮಾಡಿಸಿ ಐದು ವರ್ಷ ಪೂರ್ಣಗೊಂಡಿರುವ ಕಾರ್ಡುದಾರರಿಗೆ ಸರ್ಕಾರವು ಪುನಃ ಇ-ಕೆವೈಸಿ ಪ್ರಕ್ರಿಯೆಯನ್ನು ಕೈಗೊಂಡಿದೆ. ಇ-ಕೆವೈಸಿ ಮಾಡಿಸಿಕೊಳ್ಳಲು ಬಾಕಿ ಇರುವ ಪಡಿತರ ಚೀಟಿದಾರರ ಪಟ್ಟಿಯನ್ನು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ಈಗಾಗಲೇ ನೀಡಲಾಗಿದೆ. ಜಿಲ್ಲೆಯಾದ್ಯಂತ ಪ್ರಕ್ರಿಯೆ ಪ್ರಾರಂಭವಾಗಿದ್ದು, ಬಾಕಿ ಇರುವ ಫಲಾನುಭವಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಇ-ಕೆವೈಸಿ ಮಾಡಿಸಿಕೊಳ್ಳಲು ಸೂಚಿಸಲಾಗಿದೆ. ವಿಶೇಷವಾಗಿ ಕಳೆದ ಹಲವು ವರ್ಷಗಳಿಂದ ಗ್ರಾಮದಲ್ಲಿ ವಾಸವಿಲ್ಲದೆ ವಲಸೆ ಹೋಗಿರುವ ಅಥವಾ ಊರು ತೊರೆದಿರುವ ಪಡಿತರ ಚೀಟಿದಾರರು ಸಹ ತಮ್ಮ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಸ್ಥಿತಿಯನ್ನು ಪರಿಶೀಲಿಸಿಕೊಂಡು ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ.
ಅಗತ್ಯವಿರುವ ದಾಖಲೆಗಳು:
ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಕೆಳಗಿನ ದಾಖಲೆಗಳೊಂದಿಗೆ ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಬೇಕಾಗುತ್ತದೆ:
- ಪಡಿತರ ಚೀಟಿ (Ration Card)
- ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್
- ಎಲ್.ಪಿ.ಜಿ ಗ್ಯಾಸ್ ಪಾಸ್ಬುಕ್ (LPG Gas Book)

