ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಸಂಬಂಧಿ, ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ಮಂಜುನಾಥ್ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ.
ಬೆಳಗಾವಿಯ ಕುವೆಂಪು ನಗರ, ಗೋಕಾಕ ಹಾಗೂ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಸಚಿವರ ನಿವಾಸಗಳಲ್ಲಿ ಪರಿಶೀಲನೆ ನಡೆದಿದೆ ಎನ್ನಲಾಗಿದೆ.
ಇದೇ ವೇಳೆ ಮಂಜುನಾಥ್ ಅವರ ಬೆಳಗಾವಿ ನಿವಾಸ ಹಾಗೂ ಕಚೇರಿಯಲ್ಲೂ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಅಬಕಾರಿ ಇಲಾಖೆಯ ಬಾರ್ ಲೈಸೆನ್ಸ್ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದ ತನಿಖೆಯ ಮುಂದುವರಿದ ಭಾಗವಾಗಿ ಈ ದಾಳಿ ನಡೆದಿದೆ ಎನ್ನಲಾಗಿದ್ದು, ಬೆಂಗಳೂರು, ಬೆಳಗಾವಿ ಹಾಗೂ ಗೋವಾ ಸೇರಿದಂತೆ ಸುಮಾರು 15 ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆದಿದೆ.
ದಾಳಿಯಲ್ಲಿ ಏನು ಪತ್ತೆಯಾಗಿದೆ ಎಂಬ ಬಗ್ಗೆ EDಯ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

