ಉಡುಪಿ: ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅರ್ಧದಲ್ಲೇ ನಿಂತಿರುವುದರಿಂದ ಸಾರ್ವಜನಿಕರು ಹಳೆಯ ಕಿರಿದಾದ ರಸ್ತೆಯಲ್ಲೇ ಸಂಚರಿಸುವಂತಾಗಿದೆ. ಇದರಿಂದ ಪದೇಪದೇ ಅಪಘಾತಗಳು ಸಂಭವಿಸುತ್ತಿದ್ದು, ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಪರ್ಕಳ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಮುಖಂಡ ಮೋಹನ್ದಾಸ್ ನಾಯಕ್, ಗಣೇಶ್ ರಾಜ್ ಸರಳಬೆಟ್ಟು ಸೇರಿದಂತೆ ಸ್ಥಳೀಯರು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರನ್ನು ಭೇಟಿಯಾಗಿ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದ್ದಾರೆ.
ಹಳೆಯ ರಸ್ತೆಯನ್ನೇ ಅಗಲೀಕರಿಸಿ ಕಾಮಗಾರಿ ಮುಂದುವರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಒತ್ತಾಯಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ನ್ಯಾಯಾಲಯಕ್ಕೆ ತೆರಳಿರುವವರೊಂದಿಗೆ ಮಾತುಕತೆ ನಡೆಸಿ, ಸ್ಥಳೀಯರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದ್ದಾರೆ ಎಂದು ಮೋಹನ್ದಾಸ್ ನಾಯಕ್ ತಿಳಿಸಿದ್ದಾರೆ.

