ಉಡುಪಿ: ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲಾಸ್ಪತ್ರೆಯನ್ನು ಶೀಘ್ರವಾಗಿ ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಲು ಅಗತ್ಯ ನಿರ್ಣಯ ಕೈಗೊಳ್ಳುವಂತೆ ಶಾಸಕ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.
ಜಿಲ್ಲಾಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಅನುದಾನ, ವೈದ್ಯಕೀಯ ಉಪಕರಣಗಳು ಹಾಗೂ ಸಿಬ್ಬಂದಿ ಮಂಜೂರಾತಿಗೆ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.
ಇದರ ಜೊತೆಗೆ ಉಡುಪಿಯಲ್ಲಿ ಕೃಷಿ ಪದವಿ ಕಾಲೇಜು, ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಮೀನುಗಾರಿಕೆ, ಕಡಲ್ಕೊರೆತ ತಡೆ, ಪ್ರವಾಸೋದ್ಯಮ, ಕ್ರೀಡಾಂಗಣ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.
ಸರ್ಕಾರಿ ಇಲಾಖೆಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು, ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ ಸೌಲಭ್ಯ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಹಾಯೋಜನೆ ಅಂತಿಮಗೊಳಿಸುವುದು ಹಾಗೂ ಶ್ರೀಕೃಷ್ಣ ಕಾರಿಡಾರ್ ಅಭಿವೃದ್ಧಿಗೂ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

