ಉಡುಪಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಕರಾವಳಿಗರ ಪಾಲಿಗೆ ಹೆಮ್ಮೆಯ ವಿಚಾರವಾಗಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಇದು ಹೊಸ ಬಲ ನೀಡಲಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ತಿಳಿಸಿದ್ದಾರೆ.
ಕರಾವಳಿಯಲ್ಲಿ ಐಟಿ ಸೇರಿದಂತೆ ವಿವಿಧ ಕಂಪನಿಗಳನ್ನು ಸ್ಥಾಪಿಸಿ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕು. ಪ್ರವಾಸೋದ್ಯಮವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಿ ಹೂಡಿಕೆದಾರರನ್ನು ಆಕರ್ಷಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಮೀನುಗಾರಿಕೆ, ಬಂದರುಗಳ ಅಭಿವೃದ್ಧಿ ಹಾಗೂ ಮೀನುಗಾರರ ಬದುಕಿಗೆ ಪೂರಕ ಯೋಜನೆಗಳಿಗೆ ಒತ್ತು ನೀಡಬೇಕು. ಅರಣ್ಯ ಭೂಮಿ ಸಮಸ್ಯೆ, ಕಡಲ್ಕೊರೆತ, ಕಸ್ತೂರಿರಂಗನ್ ವರದಿ, ಗಣಿಗಾರಿಕೆ, ಕೆಂಪುಕಲ್ಲು ಹಾಗೂ ಮರಳು ಸಮಸ್ಯೆಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಪ್ರಸಾದ್ ರಾಜ್ ಕಾಂಚನ್ ತಿಳಿಸಿದ್ದಾರೆ.

