ಹೆಬ್ರಿ: ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸ್ಥಳೀಯ ಸಂಘಟನೆಗಳು ಹಾಗೂ ಜನಪ್ರತಿನಿಧಿಗಳು ಒತ್ತಾಯಿಸಿರುವಂತೆ ಭೌತಿಕ ಸಮೀಕ್ಷೆ ನಡೆಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕಸ್ತೂರಿರಂಗನ್ ವರದಿ ವ್ಯಾಪ್ತಿಯ ಜನರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರ ವಾಸ್ತವ ಸಮಸ್ಯೆಗಳನ್ನು ತಿಳಿದುಕೊಳ್ಳಲು ಖುದ್ದಾಗಿ ಇಲ್ಲಿಗೆ ಬಂದಿದ್ದೇನೆ ಎಂದರು.
ವರದಿ ಕುರಿತು ಜನರ ಅಭಿಪ್ರಾಯಗಳನ್ನು ಆಲಿಸಿದ್ದು, ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಗುವುದು. ಜನರ ಅಭಿಪ್ರಾಯವೇ ಸರ್ಕಾರದ ಅಭಿಪ್ರಾಯವಾಗಬೇಕು ಎಂಬ ಉದ್ದೇಶದಿಂದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ವರದಿ ವ್ಯಾಪ್ತಿಯ ಗ್ರಾಮಗಳಲ್ಲಿ ಭೌತಿಕ ಸಮೀಕ್ಷೆ, ಗ್ರಾಮಸಭೆ ಹಾಗೂ ಜೋನಲ್ ಮ್ಯಾನೇಜ್ಮೆಂಟ್ ಪ್ಲಾನ್ ಕುರಿತು ಬಂದಿರುವ ಸಲಹೆಗಳನ್ನು ಪರಿಗಣಿಸುವುದಾಗಿ ಸಿಎಂ ತಿಳಿಸಿದರು. ಕಾಡಂಚಿನಲ್ಲಿ ವಾಸಿಸುವ ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಮತ್ತು ಅರಣ್ಯ ಅಧಿಕಾರಿಗಳು ಜನರಿಗೆ ಅನಗತ್ಯ ತೊಂದರೆ ನೀಡಬಾರದು ಎಂದು ಸೂಚಿಸಿರುವುದಾಗಿ ಹೇಳಿದರು.
ಇದೇ ವೇಳೆ ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗಕ್ಕೆ ಸಂಬಂಧಿಸಿದ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಮೀನುಗಾರಿಕೆ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಲಿದೆ ಎಂದು ಸಿಎಂ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನಿಲ್ ಕುಮಾರ್, ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

