ರಾಯಚೂರು: ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ರಾಯಚೂರಿನ ಜಹಿರಾಬಾದ್ನ ಎಂ. ಈರಣ್ಣ ವೃತ್ತದಲ್ಲಿ ನಡೆದಿದೆ.
ಮೃತರನ್ನು 14 ವರ್ಷದ ಸುಚಿತ್ ಹಾಗೂ 16 ವರ್ಷದ ಚರಣಕುಮಾರ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 36 ವರ್ಷದ ವಿಜಯಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ನೂರಾರು ಮಂದಿ ಭಾಗವಹಿಸಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಏಕಾಏಕಿ ಜನರ ಗುಂಪಿಗೆ ನುಗ್ಗಿದೆ. ಈ ವೇಳೆ ಇಬ್ಬರು ಬಾಲಕರು ಟ್ರ್ಯಾಕ್ಟರ್ನ ಚಕ್ರದಡಿ ಸಿಲುಕಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಸ್ಥಳೀಯರು ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

