ಉಡುಪಿ: ಕಾಪು ತಾಲೂಕಿನ ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ದನವನ್ನು ಕಳ್ಳತನ ಮಾಡಲು ಯತ್ನಿಸಿದ ಆರೋಪದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸೆಪ್ಟೆಂಬರ್ 19ರಂದು ಸಂಜೆ ವಸಂತಿ ಸುನೀತಾ ಕ್ವಾಡ್ರಸ್ ಎಂಬುವವರು ಮೇಯಲು ಬಿಟ್ಟಿದ್ದ ಐದು ದನಗಳ ಪೈಕಿ ಒಂದು ದನ ಕಾಣೆಯಾಗಿತ್ತು. ಹುಡುಕಾಟ ನಡೆಸಿದಾಗ, ಸಮೀಪದಲ್ಲಿ ನಿಂತಿದ್ದ ಟೆಂಪೋವೊಂದರಲ್ಲಿ ಕಾಣೆಯಾಗಿದ್ದ ದನ ಸೇರಿದಂತೆ ಎರಡು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿರುವುದು ಪತ್ತೆಯಾಗಿದೆ.
ವಾಹನದ ಬಳಿ ಇದ್ದ ಆರೋಪಿಗಳು ದೂರುದಾರರನ್ನು ಕಂಡ ಕೂಡಲೇ ಟೆಂಪೋ ಸಮೇತ ಪರಾರಿಯಾಗಿದ್ದರು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಮೊದಲ ಆರೋಪಿ 64 ವರ್ಷದ ಉಮ್ಮರಬ್ಬನನ್ನು ಸೆಪ್ಟೆಂಬರ್ 19ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ತಲೆಮರೆಸಿಕೊಂಡಿದ್ದ ಮೊಹಮ್ಮದ್ ಶರೀಫ್, ಶಂಶುದ್ದೀನ್ ಹಾಗೂ ಮೊಹಮ್ಮದ್ ಆಸೀರ್ ಎಂಬ ಮೂವರು ಆರೋಪಿಗಳನ್ನು ಸೆಪ್ಟೆಂಬರ್ 20ರಂದು ಕಾಪುವಿನ ಕೊಪ್ಪಲಂಗಡಿಯಲ್ಲಿ ವಾಹನ ಸಮೇತ ಪತ್ತೆಹಚ್ಚಿ ಬಂಧಿಸಲಾಗಿದೆ.
ಕೃತ್ಯಕ್ಕೆ ಬಳಸಿದ್ದ KA-19-B-5641 ನೋಂದಣಿ ಸಂಖ್ಯೆಯ ಟೆಂಪೋ ಹಾಗೂ ದನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಾದ 24 ಗಂಟೆಯೊಳಗೆ ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಕಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತ ಹಾಗೂ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಝಮತ್ ಆಲಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಶಿರ್ವ, ಕಾಪು ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಗಳ ಸಿಬ್ಬಂದಿ ಮತ್ತು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಸಿ.ಡಿ.ಆರ್. ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

