ಬೆಂಗಳೂರು: ಕರಾವಳಿ ಕರ್ನಾಟಕ ಭಾಗದಲ್ಲಿ ಹೈಕೋರ್ಟ್ನ ಸಂಚಾರಿ ಪೀಠ ಅಥವಾ ಶಾಶ್ವತ ಪೀಠ ಸ್ಥಾಪಿಸುವ ಸಾಧ್ಯತೆ ಕುರಿತು ಪರಿಶೀಲನೆ ನಡೆಸಲು ಮೂವರು ಹೈಕೋರ್ಟ್ ನ್ಯಾಯಮೂರ್ತಿಗಳನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಆದೇಶದ ಮೇರೆಗೆ ಮೂವರು ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿ, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಎಂ. ಚಂದ್ರಶೇಖರ ರೆಡ್ಡಿ ಅಧಿಸೂಚನೆ ಹೊರಡಿಸಿದ್ದಾರೆ.
ಹಿರಿಯ ನ್ಯಾಯಮೂರ್ತಿ ಅನು ಶಿವರಾಮನ್, ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಹಾಗೂ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.
ಸಮಿತಿಯು ಮಂಗಳೂರು/ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು-ಮಡಿಕೇರಿ, ಹಾಸನ, ದಾವಣಗೆರೆ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಲಿದೆ. ಈ ವೇಳೆ ಸ್ಥಳೀಯ ವಕೀಲರ ಸಂಘಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ, ಆಯಾ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವ ಕಾರ್ಯಸಾಧ್ಯತೆ ಕುರಿತು ಮಾಹಿತಿ ಸಂಗ್ರಹಿಸಲಿದೆ.
ಸಮಾಲೋಚನೆ ಹಾಗೂ ಪರಿಶೀಲನೆ ಪೂರ್ಣಗೊಂಡ ಬಳಿಕ ಹೈಕೋರ್ಟ್ ಪೀಠ ಸ್ಥಾಪನೆಯ ಕಾರ್ಯಸಾಧ್ಯತೆ ಕುರಿತು ಸಮಿತಿಯು ವರದಿಯನ್ನು ಸಲ್ಲಿಸಲಿದೆ.

