ಸಹೋದರನಿಗೆ ಖಾಯಂ ಉದ್ಯೋಗ
ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ
ಮಂಗಳೂರು: ನಗರದ ಜೋಕಟ್ಟೆಯಲ್ಲಿರುವ ಎಂಆರ್ಪಿಎಲ್ (MRPL) ಘಟಕದಲ್ಲಿ ಬುಧವಾರ ಸಂಭವಿಸಿದ ಸ್ಫೋಟದ ಹಿನ್ನೆಲೆಯಲ್ಲಿ, ಘಟನೆಯಲ್ಲಿ ಮೃತಪಟ್ಟ ಕಾರ್ಮಿಕ ಮನೀಶ್ ಕರ್ಕೇರ ಅವರ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡುವಂತೆ ಹಾಗೂ ಅವರ ಸಹೋದರನಿಗೆ ಎಂಆರ್ಪಿಎಲ್ನಲ್ಲಿ ಖಾಯಂ ಉದ್ಯೋಗ ಕಲ್ಪಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಚಿವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಎಂಆರ್ಪಿಎಲ್ ಘಟಕಕ್ಕೆ ಭೇಟಿ ನೀಡಿ ಸ್ಫೋಟ ಸಂಭವಿಸಿದ ಸ್ಥಳವನ್ನು ಪರಿಶೀಲಿಸಿದರು. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಎಂಆರ್ಪಿಎಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.
ಎಂಆರ್ಪಿಎಲ್ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಅಧಿಕ ಒತ್ತಡದಿಂದ ಆಕಸ್ಮಿಕ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಈ ಸಂಬಂಧ ತನಿಖೆ ನಡೆಸಲು ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಅಧಿಕಾರಿಗಳ ತಂಡ ದೆಹಲಿಯಿಂದ ಮಂಗಳೂರಿಗೆ ಆಗಮಿಸಲಿದೆ ಎಂದು ತಿಳಿಸಲಾಗಿದೆ.
ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಅವರ ಕುಟುಂಬವನ್ನು ಭೇಟಿಯಾದ ಯು.ಟಿ. ಖಾದರ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, “ಮನೀಶ್ ಕರ್ಕೇರ ಅವರ ಕುಟುಂಬಕ್ಕೆ ಎಂಆರ್ಪಿಎಲ್ ವತಿಯಿಂದ ಗರಿಷ್ಠ ಪರಿಹಾರ ನೀಡುವಂತೆ ಹಾಗೂ ಅವರ ಸಹೋದರನಿಗೆ ಎಂಆರ್ಪಿಎಲ್ನಲ್ಲಿ ಖಾಯಂ ಉದ್ಯೋಗ ಕಲ್ಪಿಸುವಂತೆ ಸೂಚಿಸಿದ್ದೇನೆ” ಎಂದು ತಿಳಿಸಿದರು.
ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ
ಸ್ಫೋಟದಿಂದ ಹಾನಿಗೊಳಗಾದ ಜೋಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಸಚಿವ ಯು.ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಈದ್ಗಾ ಮಸ್ಜಿದ್, ಅಂಜುಮಾನ್ ವಿದ್ಯಾಸಂಸ್ಥೆ, ಕಲವಾರು ಮಸ್ಜಿದ್, ಕಲವಾರು ಚರ್ಚ್ ಹಾಗೂ ಶಾಂತಿಗುಡ್ಡೆ ಮಸ್ಜಿದ್ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಹಾನಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಏನಿದು ಘಟನೆ?
ಬುಧವಾರ ಮಧ್ಯಾಹ್ನ ಸುಮಾರು 12.15ರ ವೇಳೆಗೆ ಎಂಆರ್ಪಿಎಲ್ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕ (CHTU)ದಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟದ ಬಳಿಕ ಘಟಕದಲ್ಲಿ ಬೆಂಕಿ ಹಾಗೂ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದರು. ಘಟನೆಯಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದಾರೆ.
ಘಟನೆಯ ಬಳಿಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ನರ್ವಡೆ ವಿನಾಯಕ್ ಕಾರ್ಭಾರಿ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಮಾನವ ಹಕ್ಕುಗಳ ಆಯೋಗಕ್ಕೆ ಡಿವೈಎಫ್ಐ ಮನವಿ
ಎಂಆರ್ಪಿಎಲ್ ಘಟಕದಲ್ಲಿ ಸಂಭವಿಸಿದ ಸ್ಫೋಟ ಮತ್ತು ಅಗ್ನಿ ಅವಘಡದಲ್ಲಿ ಕಾರ್ಮಿಕನ ಸಾವು, ಹಲವರು ಗಾಯಗೊಂಡಿರುವುದು ಹಾಗೂ ಸಾರ್ವಜನಿಕ ಸುರಕ್ಷತೆಗೆ ಉಂಟಾಗಿರುವ ಅಪಾಯದ ಹಿನ್ನೆಲೆಯಲ್ಲಿ ಡಿವೈಎಫ್ಐ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಮನವಿ ಸಲ್ಲಿಸಿದೆ.
ಮಾನವ ಹಕ್ಕುಗಳ ಸಂರಕ್ಷಣಾ ಕಾಯ್ದೆ, 1993ರ ಸೆಕ್ಷನ್ 12ರ ಅಡಿಯಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ, ತುರ್ತು, ಸ್ವತಂತ್ರ ಹಾಗೂ ಸಮಗ್ರ ಮಾನವ ಹಕ್ಕುಗಳ ತನಿಖೆ ನಡೆಸುವಂತೆ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸಿದೆ. ಈ ಸಂಬಂಧ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರಿಗೆ ಗುರುವಾರ ನಿಯೋಗದ ಮೂಲಕ ಮನವಿ ಸಲ್ಲಿಸಲಾಯಿತು.

