ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಾದ್ಯಂತ ತಾತ್ಕಾಲಿಕವಾಗಿ ಸುಡುಮದ್ದು ಮಾರಾಟ ಮಾಡಲು ಉದ್ದೇಶಿಸಿರುವವರಿಗೆ ಪರವಾನಿಗೆ ಪಡೆಯಲು ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ.
ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ನಿಗದಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆ ತೆರೆಯಲು ಪರವಾನಿಗೆ ನೀಡಲಾಗುತ್ತದೆ. ಇದಕ್ಕಾಗಿ ಅರ್ಜಿದಾರರು ನಿಗದಿತ AE-5 ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಜಿಲ್ಲಾಧಿಕಾರಿ ಕಚೇರಿಯಿಂದ ಪಡೆದು ಸಲ್ಲಿಸುವುದರ ಜೊತೆಗೆ, ಸಂಬಂಧಿತ ಆನ್ಲೈನ್ ಪೋರ್ಟಲ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಕ್ಟೋಬರ್ 26, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ರೂ.200 ಪರಿಶೀಲನಾ ಶುಲ್ಕ (Scrutiny Fee) ಪಾವತಿಸಬೇಕು. ಪರವಾನಿಗೆ ಮಂಜೂರಾದ ಸಂದರ್ಭದಲ್ಲಿ ರೂ.500 ಪರವಾನಿಗೆ ಶುಲ್ಕ (License Fee) ಪಾವತಿಸಬೇಕಾಗುತ್ತದೆ.
ಅರ್ಜಿಯೊಂದಿಗೆ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ ನಕ್ಷೆ ಅಥವಾ ಬ್ಲೂಪ್ರಿಂಟ್, ಅರ್ಜಿದಾರರ ಭಾವಚಿತ್ರ, ಪ್ರಸ್ತಾವಿತ ಜಮೀನಿನ ಪಹಣಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಖಾಸಗಿ ಜಮೀನಿನಲ್ಲಿ ಮಳಿಗೆ ತೆರೆಯುವುದಾದರೆ ಜಮೀನು ಮಾಲೀಕರ ಒಪ್ಪಿಗೆ ಪತ್ರವನ್ನು ಸಲ್ಲಿಸಬೇಕು. ಸರ್ಕಾರಿ ಜಾಗವಾಗಿದ್ದರೆ ಸಂಬಂಧಪಟ್ಟ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ (NOC) ಪಡೆಯಬೇಕು.
ಇದಲ್ಲದೆ, ಜಿಲ್ಲಾ ಅಗ್ನಿಶಾಮಕ ಇಲಾಖೆ, ಪೊಲೀಸ್ ಇಲಾಖೆ, ಸಂಬಂಧಪಟ್ಟ ತಹಶೀಲ್ದಾರ್ ಹಾಗೂ ಸ್ಥಳೀಯ ಸಂಸ್ಥೆಗಳಿಂದ ಅಗತ್ಯ ನಿರಾಕ್ಷೇಪಣಾ ಪತ್ರಗಳನ್ನು ಪಡೆದು ಅರ್ಜಿಯೊಂದಿಗೆ ಸಲ್ಲಿಸುವುದು ಕಡ್ಡಾಯವಾಗಿದೆ. ತಾಲೂಕು ಮಟ್ಟದ ಸಮಿತಿಯಿಂದ ಪರಿಶೀಲನೆ ನಡೆಸಿ ನೀಡುವ ನಿರಾಕ್ಷೇಪಣಾ ಪತ್ರವನ್ನೂ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.
ತಾಲೂಕು ಮಟ್ಟದ ಸಮಿತಿಯು ನಿಗದಿಪಡಿಸುವಂತೆ, ಸಾರ್ವಜನಿಕ ವಸತಿ ಪ್ರದೇಶಗಳು ಹಾಗೂ ಅಂಗಡಿಗಳಿಂದ ಸೂಕ್ತ ಅಂತರದಲ್ಲಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಮಾತ್ರ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅವಕಾಶವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಗತ್ಯ ನಿರಾಕ್ಷೇಪಣಾ ಪತ್ರಗಳು ಹಾಗೂ ದಾಖಲೆಗಳನ್ನು ಸಲ್ಲಿಸಿದ ಬಳಿಕ Explosives Act, 1884ರ ಸೆಕ್ಷನ್ 84 ಮತ್ತು Explosives Rules, 2008ರ ನಿಯಮಗಳಿಗೆ ಒಳಪಟ್ಟು ಜಿಲ್ಲಾಧಿಕಾರಿ ಕಚೇರಿಯಿಂದ ಪರವಾನಿಗೆ ಮಂಜೂರು ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

