ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ದಾರುಣ ಘಟನೆ ಸೋಮವಾರ ಬೆಳಗ್ಗೆ ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದ ಬಳಿ ಜರುಗಿದೆ.
ದೆಹಲಿ ಮತ್ತು ಎರ್ನಾಕುಲಂ ನಡುವೆ ಸಂಚರಿಸುವ ಟಿನ್ ಸಂಖ್ಯೆ 1284ರ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲು ಇಂದ್ರಾಳಿ ರೈಲು ನಿಲ್ದಾಣದ ಮೂಲಕ ನಿಧಾನಗತಿಯಲ್ಲಿ ಚಲಿಸುತ್ತಿದ್ದ ವೇಳೆ, ರೈಲಿನ ಎರಡನೇ ಬೋಗಿಯಲ್ಲಿದ್ದ ಪ್ರಯಾಣಿಕರೊಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾರೆ. ಆದರೆ, ಈ ರೈಲಿಗೆ ಇಂದ್ರಾಳಿ ನಿಲ್ದಾಣದಲ್ಲಿ ಯಾವುದೇ ನಿಲುಗಡೆ ಇರಲಿಲ್ಲ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ರೈಲ್ವೆ ಆರ್ ಪಿ ಎಫ್ ಸಿಬ್ಬಂದಿ ಹಾಗೂ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಕೂಡಲೇ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ಖಚಿತಪಡಿಸಿದ್ದಾರೆ.
ಮೃತಪಟ್ಟ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಮೃತರ ವಾರಸುದಾರರು ಮಣಿಪಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.

