ಚಿಕ್ಕಮಗಳೂರು: ರಾಜ್ಯದಲ್ಲಿ ಬಹುಕಾಲದಿಂದ ಬಾಕಿ ಉಳಿದಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಜನವರಿ 15ರೊಳಗೆ ನಡೆಸುವ ಉದ್ದೇಶವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮೀಸಲಾತಿ ಪಟ್ಟಿಯನ್ನು ನಾಳೆ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು. ಕರಡು ಮೀಸಲಾತಿ ಪ್ರಕಟವಾದ ಬಳಿಕ ಸಾರ್ವಜನಿಕರು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು 10 ದಿನಗಳ ಕಾಲಾವಕಾಶ ನೀಡಲಾಗುತ್ತದೆ ಎಂದರು.
ಡಿಸೆಂಬರ್ನಿಂದ ಜನವರಿ 15ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಡೆಯಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಅಂತಿಮ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಬೇಕಿದೆ. ಚುನಾವಣೆಗೆ ಸಂಬಂಧಿಸಿದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿಯೇ ತಾವು ಮಾಹಿತಿ ನೀಡುತ್ತಿರುವುದಾಗಿ ಈಶ್ವರ ಖಂಡ್ರೆ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯ ಸಿದ್ಧತಾ ಪ್ರಕ್ರಿಯೆ ಇದೀಗ ವೇಗ ಪಡೆಯುವ ಸಾಧ್ಯತೆ ಇದೆ. ಮೀಸಲಾತಿ ಕರಡು ಪ್ರಕಟಣೆ, ಆಕ್ಷೇಪಣೆಗಳ ಪರಿಶೀಲನೆ ಹಾಗೂ ಅಂತಿಮ ಪಟ್ಟಿಯ ಪ್ರಕಟಣೆಯ ಬಳಿಕ ಚುನಾವಣಾ ವೇಳಾಪಟ್ಟಿ ಸ್ಪಷ್ಟವಾಗಲಿದೆ.

