ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66 ರ ಉಪ್ಪೂರು ಗ್ರಾಮದ ರಿಕ್ಷಾ ನಿಲ್ದಾಣದ ಬಳಿ ಅತಿವೇಗವಾಗಿ ಬಂದ ಮೋಟಾರ್ ಸೈಕಲ್ ಡಿಕ್ಕ ಹೊಡೆದು ತೀವ್ರ ಗಾಯಗೊಂಡಿದ್ದ ಪಾದಚಾರಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಉಪ್ಪೂರು ಗ್ರಾಮದ ಹರ್ಮನ್ ಡಿಸೋಜಾ ಎಂದು ಗುರುತಿಸಲಾಗಿದೆ.
ಬೆಳಿಗ್ಗೆ ಸುಮಾರು 7:45 ರ ವೇಳೆಗೆ ಹರ್ಮನ್ ಡಿಸೋಜಾ ಅವರು ಹೆದ್ದಾರಿಯ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬ್ರಹ್ಮಾವರ ಕಡೆಯಿಂದ ಉಡುಪಿ ಕಡೆಗೆ ಆರೋಪಿ ಸುದೀಪ್ ಎಂಬಾತನ ಬೈಕ್ ಹರ್ಮನ್ ಅವರಿಗೆ ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಹರ್ಮನ್ ಅವರ ತಲೆಯ ಹಿಂಭಾಗ ಹಾಗೂ ಬಲ ಕಿವಿಯ ಬಳಿ ತೀವ್ರ ಸ್ವರೂಪದ ರಕ್ತಗಾಯಗಳಾಗಿದ್ದವು. ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರನಿಗೂ ಸಣ್ಣಪುಟ್ಟ ತರಚಿದ ಗಾಯಗಳಾಗಿವೆ.
ಘಟನೆಗೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 189/2026, ಭಾರತೀಯ ನ್ಯಾಯ ಸಂಹಿತೆ (BNS) ಯ ಕಲಂ 281 ಮತ್ತು 106 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

