ಹಿರಿಯಡ್ಕ: ಹರಿಖಂಡಿಗೆ ಕಡೆಯಿಂದ ಹಿರಿಯಡ್ಕ ಕಡೆಗೆ ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಿರಿಯಡ್ಕ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಅಬ್ದುಲ್ ಸತ್ತಾರ್ ಹಾಗೂ ಯೋಗೀಶ ನಾಯ್ಕ್ ಎಂದು ಗುರುತಿಸಲಾಗಿದೆ.
ಶುಕ್ರವಾರ ಸಂಜೆ ಅಕ್ರಮ ಜಾನುವಾರು ಸಾಗಾಟದ ಕುರಿತು ಸಾರ್ವಜನಿಕರಿಂದ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ, ಹಿರಿಯಡ್ಕ ಪೊಲೀಸ್ ಠಾಣೆಯ ಸಿಬ್ಬಂದಿಯವರು ಠಾಣೆಯ ಎದುರಿನ ಜಂಕ್ಷನ್ ಬಳಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಹರಿಖಂಡಿಗೆ ಕಡೆಯಿಂದ ಬಂದ ಪಿಕಪ್ ಗೂಡ್ಸ್ ಟೆಂಪೋವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ ಒಟ್ಟು 4 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ.
ಪೊಲೀಸರ ವಿಚಾರಣೆ ವೇಳೆ, ಕಾರ್ಕಳ ತಾಲೂಕಿನ ಕುಕ್ಕುಜೆ ಗ್ರಾಮದ ಪಲಬೆಟ್ಟು ನಿವಾಸಿ ಕೃಷ್ಣ ಪೂಜಾರಿ ಎಂಬುವವರ ಮನೆಯ ಬಳಿ ಮೇಯುತ್ತಿದ್ದ ಜಾನುವಾರುಗಳನ್ನು ಕಳವು ಮಾಡಿ, ಕಸಾಯಿಖಾನೆಗೆ ಮಾರಾಟ ಮಾಡುವ ಉದ್ದೇಶದಿಂದ ಕರೆದೊಯ್ಯುತ್ತಿದ್ದುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ವಾಹನ ಚಾಲಕ ಅಬ್ದುಲ್ ಸತ್ತಾರ್ ಈ ವಾಹನ ತನ್ನದೇ ಎಂದು ತಿಳಿಸಿದ್ದಾನೆ.
ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 59/2026 ರಂತೆ BNS ಕಲಂ 303(2), ಪ್ರಾಣಿಹಿಂಸಾ ಪ್ರತಿಬಂಧಕ ಕಾಯ್ದೆಯ ಕಲಂ 11(1)(ಡಿ) ಹಾಗೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯ ಸೆಕ್ಷನ್ 4, 5, 7, 12 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

