ಬ್ರಹ್ಮಾವರ: ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಹೈಕೋರ್ಟ್ ಪೀಠವನ್ನು ಈ ಭಾಗದಲ್ಲಿ ಸ್ಥಾಪಿಸುವಂತೆ ಆಗ್ರಹಿಸಿ, ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಲು ಹಾಗೂ ಅಭಿಪ್ರಾಯ ಸಂಗ್ರಹಿಸಲು ಅಕ್ಟೋಬರ್ 17ರ ಶನಿವಾರದಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಕರಾವಳಿ ಹೈಕೋರ್ಟ್ ಪೀಠದ ಬೇಡಿಕೆಯನ್ನು ಪರಿಶೀಲಿಸಲು ಮೂವರು ನ್ಯಾಯಮೂರ್ತಿಗಳನ್ನೊಳಗೊಂಡ ತ್ರಿ-ಸದಸ್ಯ ಸಮಿತಿಯನ್ನು ನೇಮಿಸಿರುವ ಹಿನ್ನೆಲೆಯಲ್ಲಿ ಈ ಸಭೆಗೆ ಅತ್ಯಂತ ಮಹತ್ವ ಬಂದಿದೆ.
ನ್ಯಾಯಾಂಗ ವ್ಯವಸ್ಥೆಯನ್ನು ಕರಾವಳಿ ಭಾಗದ ಜನರಿಗೆ ಮತ್ತಷ್ಟು ಹತ್ತಿರವಾಗಿಸುವ ಈ ಐತಿಹಾಸಿಕ ಹೋರಾಟಕ್ಕೆ ಬ್ರಹ್ಮಾವರ ತಾಲೂಕಿನ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಯುವಕರು, ಮಹಿಳೆಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಭೆಯನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

