ಬೆಂಗಳೂರು (ಅಕ್ಟೋಬರ್ 17): ಈಶಾನ್ಯ ಮಾರುತಗಳ ಆಗಮನ ಹಾಗೂ ವಾಯುಭಾರ ಕುಸಿತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಮುಂಬರುವ ಅಕ್ಟೋಬರ್ 22ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಭವಿಷ್ಯ ನುಡಿದಿದೆ. ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ನಿರೀಕ್ಷೆಯಿದ್ದು, ಮುಂಜಾಗ್ರತಾ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಜಾರಿಗೊಳಿಸಲಾಗಿದೆ.
ಕರಾವಳಿ ಭಾಗದಲ್ಲಿ ಇರಲಿದೆ ಮಳೆಯ ಅಬ್ಬರ
ವಿಶೇಷವಾಗಿ, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಭಾಗದ ಕಡಲ ತೀರದಲ್ಲಿ ಆಗಾಗ್ಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರು ಹಾಗೂ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಕಟ್ಟೆಚ್ಚರ
ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ. ಇದಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದ್ದು, ಸಾರ್ವಜನಿಕರು ಅನಗತ್ಯ ಪ್ರಯಾಣ ತವರಿಸಿ ಮುನ್ನೆಚ್ಚರಿಕೆ ವಹಿಸುವಂತೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ನಾಳಿನ (ಅಕ್ಟೋಬರ್ 18) ಹವಾಮಾನ ಹೇಗಿರಲಿದೆ?
ಅಕ್ಟೋಬರ್ 18ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿಯಲಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದರೆ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

