ಉಡುಪಿ: ಅಜ್ಜರಕಾಡಿನ ನೂತನ ಜಿಲ್ಲಾ ಆಸ್ಪತ್ರೆಯನ್ನು ಅಗತ್ಯ ವೈದ್ಯಕೀಯ ಉಪಕರಣಗಳು ಹಾಗೂ ಸುಸಜ್ಜಿತ ಸೌಲಭ್ಯಗಳೊಂದಿಗೆ ನವೆಂಬರ್ 5ರೊಳಗೆ ಆರಂಭಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ್ ಶೆಟ್ಟಿ ಬಣ) ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಗ್ರಹಿಸಿದರು.
ಉಡುಪಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಜಿಲ್ಲಾಸ್ಪತ್ರೆ ಆರಂಭಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಹೋರಾಟದ ಫಲವಾಗಿ ಜಿಲ್ಲಾಡಳಿತ ನವೆಂಬರ್ 5ರೊಳಗೆ ಆಸ್ಪತ್ರೆ ಕಾರ್ಯಾರಂಭ ಮಾಡುವ ಭರವಸೆ ನೀಡಿದೆ. ಅದರಂತೆ ನಿಗದಿತ ಗಡುವಿನೊಳಗೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ಪ್ರಕ್ರಿಯೆ ಆರಂಭವಾಗಬೇಕು ಎಂದು ಒತ್ತಾಯಿಸಿದರು.
ಆದರೆ, ತರಾತುರಿಯಲ್ಲಿ ಆಸ್ಪತ್ರೆ ಆರಂಭಿಸುವ ಉದ್ದೇಶದಿಂದ ಹಳೆಯ ಜಿಲ್ಲಾಸ್ಪತ್ರೆಯ ವೈದ್ಯಕೀಯ ಉಪಕರಣಗಳು ಹಾಗೂ ಪರಿಕರಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಿ ಅಳವಡಿಸುವ ಕಾರ್ಯ ನಡೆಯುತ್ತಿದೆ. ಈ ಕ್ರಮವು ಸಂಘಟನೆಯ ಪ್ರಮುಖ ಬೇಡಿಕೆಗೆ ವಿರುದ್ಧವಾಗಿದೆ. ನೂತನ ಜಿಲ್ಲಾಸ್ಪತ್ರೆಯನ್ನು ಅಗತ್ಯ ವೈದ್ಯಕೀಯ ಉಪಕರಣಗಳು ಮತ್ತು ಆಧುನಿಕ ಸೌಲಭ್ಯಗಳೊಂದಿಗೆ ಆರಂಭಿಸಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದು ಹೇಳಿದರು.
ಕೇವಲ ಕಟ್ಟಡವನ್ನು ಸಿದ್ಧಪಡಿಸಿ, ಹಳೆಯ ಪರಿಕರಗಳನ್ನು ಸ್ಥಳಾಂತರಿಸುವ ಮೂಲಕ ಆಸ್ಪತ್ರೆ ಆರಂಭಿಸಿದರೆ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸಲು ಸಾಧ್ಯವಾಗುವುದಿಲ್ಲ. ವಿಶೇಷವಾಗಿ ಬಡ ಮತ್ತು ಸಾಮಾನ್ಯ ವರ್ಗದ ಜನರು ಉತ್ತಮ ವೈದ್ಯಕೀಯ ಸೇವೆ ಪಡೆಯುವಂತಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಪ್ರವೀಣ್ ಶೆಟ್ಟಿ ಒತ್ತಾಯಿಸಿದರು.
ಬಡ ರೋಗಿಗಳ ಆರೋಗ್ಯದ ವಿಚಾರದಲ್ಲಿ ಜಿಲ್ಲಾಡಳಿತ ಅಥವಾ ಸಂಬಂಧಪಟ್ಟ ಇಲಾಖೆ ನಿರ್ಲಕ್ಷ್ಯ ವಹಿಸಿದರೆ, ಈ ಹಿಂದೆ ಎಚ್ಚರಿಕೆ ನೀಡಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಕರವೇ ರಾಜ್ಯ ಸಂಚಾಲಕ ಪ್ರಸನ್ನ ಶೆಟ್ಟಿ, ಜಿಲ್ಲಾ ಗೌರವಾಧ್ಯಕ್ಷ ಅನ್ಸರ್ ಅಹಮದ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

