ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು-ಹಿಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಅಕ್ಟೋಬರ್ 22ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಹೆಚ್ಚಾಗುವ ಸಂಭವವಿದ್ದು, ಕೆಲ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲ ಭಾಗಗಳಲ್ಲಿ ಸಿಡಿಲು ಹಾಗೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದಲ್ಲಿ ಇಡೀ ದಿನ ಮೋಡ ಕವಿದ ವಾತಾವರಣವಿರಲಿದ್ದು, ಆಗಾಗ್ಗೆ ಮಳೆ ಸುರಿಯುವ ನಿರೀಕ್ಷೆಯಿದೆ.
ಸಾರ್ವಜನಿಕರಿಗೆ ಎಚ್ಚರಿಕೆ
ಗುಡುಗು-ಸಿಡಿಲಿನ ಅಬ್ಬರ ಹೆಚ್ಚಿರುವ ಸಮಯದಲ್ಲಿ ಸಾರ್ವಜನಿಕರು ತೆರೆದ ಪ್ರದೇಶಗಳಲ್ಲಿ ಓಡಾಡುವುದನ್ನು ಹಾಗೂ ನಿಲ್ಲುವುದನ್ನು ಕಡ್ಡಾಯವಾಗಿ ತಪ್ಪಿಸಬೇಕು. ಸಿಡಿಲು ಮಿಂಚು ಕಾಣಿಸಿಕೊಂಡಾಗ ಮರಗಳ ಕೆಳಗೆ ಆಶ್ರಯ ಪಡೆಯದೆ, ಯಾವುದೇ ಅಪಾಯವಿಲ್ಲದ ಸುರಕ್ಷಿತ ಕಟ್ಟಡಗಳ ಒಳಗೆ ಆಶ್ರಯ ಪಡೆದು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

