ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಮಣೂರು ಗ್ರಾಮದ ಕಿರಿ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ದಿನಾಂಕ ಅಕ್ಟೋಬರ್ 23ರಂದು ಬೆಳಿಗ್ಗೆ ಸುಮಾರು 9:20ರ ಸುಮಾರಿಗೆ ಕುಂದಾಪುರದಿಂದ ಉಡುಪಿ ಕಡೆಗೆ ತೆರಳುತ್ತಿದ್ದ 407 ಟೆಂಪೊ ಚಾಲಕ ಯಾವುದೇ ಸೂಚನೆ ನೀಡದೆ ಏಕಾಏಕಿ ತನ್ನ ವಾಹನವನ್ನು ರಸ್ತೆಯ ಮಧ್ಯಭಾಗದಲ್ಲಿ ನಿಲ್ಲಿಸಿದ್ದಾನೆ. ಇದರಿಂದಾಗಿ ಅದೇ ದಿಕ್ಕಿನಲ್ಲಿ ಹಿಂಬದಿಯಿಂದ ಬರುತ್ತಿದ್ದ ಬೈಕ್ ಸವಾರ ಸಚಿನ್ (42) ನಿಯಂತ್ರಣ ಕಳೆದುಕೊಂಡು ಟೆಂಪೊಗೆ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದಿದ್ದಾರೆ.
ಅಪಘಾತದ ತೀವ್ರತೆಗೆ ಸವಾರ ಸಚಿನ್ ಅವರ ಎದೆ, ತಲೆ ಹಾಗೂ ಹೊಟ್ಟೆಗೆ ತೀವ್ರ ಸ್ವರೂಪದ ರಕ್ತಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 161/2026 ರಡಿ ಬಿ.ಎನ್.ಎಸ್. (BNS) ಕಾಯ್ದೆಯ ಕಲಂ: 281 ಮತ್ತು 125(B) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

