ಉಡುಪಿ:ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಮಾರಕ ಆಯುಧಗಳನ್ನು ಇಟ್ಟುಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಡುಪಿಯ ಕಿನ್ನಿಮೂಲ್ಕಿಯ ಮಾಂಡವಿ ಪ್ಯಾರಡೈಸ್ ನಿವಾಸಿ ಮಹಮ್ಮದ್ ಪವೇಜ್ (26) ಎಂದು ಗುರುತಿಸಲಾಗಿದೆ.

ಅ. 24ರಂದು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಶಂಭುಲಿಂಗಯ್ಯ ಎಂ.ಐ. ಅವರು ಗಸ್ತಿನಲ್ಲಿದ್ದಾಗ ವ್ಯಕ್ತಿಯೊಬ್ಬ ಮಾರಕ ಆಯುಧಗಳೊಂದಿಗೆ ಇರುವ ಬಗ್ಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ, ಆತನ ಬಳಿ ಸುಮಾರು 20 ಇಂಚು ಉದ್ದದ ನೀಲಿ ಹಿಡಿಕೆಯ ಕಬ್ಬಿಣದ ಲಾಂಗ್ ಹಾಗೂ 16 ಇಂಚು ಉದ್ದದ ಹಸಿರು ಹಿಡಿಕೆಯ ಕಬ್ಬಿಣದ ಚಾಕು ಪತ್ತೆಯಾಗಿವೆ.
ವಿಚಾರಣೆ ವೇಳೆ ದಾವೂದ್, ಇಸಾಕ್ ಹಾಗೂ ಗರುಡ ಗ್ಯಾಂಗ್ನ ಕೆಲವರೊಂದಿಗೆ ವೈಮನಸ್ಸಿದ್ದು, ಅವರ ಮೇಲೆ ಹಲ್ಲೆ ನಡೆಸುವ ಉದ್ದೇಶದಿಂದ ಆಯುಧಗಳನ್ನು ಇಟ್ಟುಕೊಂಡಿರುವುದಾಗಿ ಆರೋಪಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಈ ಹಿಂದೆ ಉಡುಪಿ ನಗರ, ಶಿವಳ್ಳಿ, ಸೆನ್ ಹಾಗೂ ಮಂಗಳೂರಿನ ಕಾವೂರು ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ.
ಅನುಮತಿಯಿಲ್ಲದೆ ಯಾವುದೇ ಸೂಕ್ತ ಕಾರಣವಿಲ್ಲದೆ ಮಾರಕ ಆಯುಧಗಳನ್ನು ಹೊಂದಿದ್ದ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 175/2026ರಂತೆ ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 4, 25(1B)(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

