ಹಾಸನ: ಇತಿಹಾಸ ಪ್ರಸಿದ್ಧ ಹಾಸನದ ಹಾಸನಾಂಬೆ ದೇವಾಲಯದಲ್ಲಿ ಈ ವರ್ಷದ ಸಾರ್ವಜನಿಕ ದರ್ಶನೋತ್ಸವ ಶುಕ್ರವಾರದಿಂದ ಆರಂಭಗೊಂಡಿದೆ. ನವೆಂಬರ್ 10ರವರೆಗೆ ಭಕ್ತರಿಗೆ ದೇವಿಯ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಶುಕ್ರವಾರ ಬೆಳಗ್ಗೆ 6 ಗಂಟೆಯಿಂದಲೇ ದರ್ಶನ ಆರಂಭವಾಗಿದ್ದು, ಮೊದಲ ದಿನವೇ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿ ಹಾಸನಾಂಬೆಯ ದರ್ಶನ ಪಡೆದು ಆಶೀರ್ವಾದ ಪಡೆದರು.
ಭಕ್ತರ ಅನುಕೂಲಕ್ಕಾಗಿ 300 ರೂ. ಹಾಗೂ 1,000 ರೂ. ಮೌಲ್ಯದ ವಿಶೇಷ ದರ್ಶನ ಟಿಕೆಟ್ಗಳ ವ್ಯವಸ್ಥೆ ಮಾಡಲಾಗಿದೆ. ಆನ್ಲೈನ್ ಮೂಲಕ ಗೋಲ್ಡ್ ಪಾಸ್ ಟಿಕೆಟ್ ಕಾಯ್ದಿರಿಸಿಕೊಂಡು ಬರುವ ಭಕ್ತರಿಗೂ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.
ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮಳೆಯಿಂದ ರಕ್ಷಣೆ ಪಡೆಯಲು ದೇವಾಲಯದ ಆವರಣ ಹಾಗೂ ಸರತಿ ಸಾಲುಗಳಲ್ಲಿ ಟೆಂಟ್ಗಳನ್ನು ಅಳವಡಿಸಲಾಗಿದೆ. ಅಲ್ಲದೆ, ಭಕ್ತರಿಗೆ ಪ್ರಸಾದ ವಿತರಣೆಯ ವ್ಯವಸ್ಥೆಯನ್ನೂ ಮಾಡಲಾಗಿದೆ.
ದರ್ಶನೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ನೂಕುನುಗ್ಗಲು ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಭದ್ರತೆಗಾಗಿ 2,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಟ್ಟು 12 ದಿನಗಳ ಕಾಲ ನಡೆಯಲಿರುವ ಹಾಸನಾಂಬೆ ದರ್ಶನೋತ್ಸವಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

